ಆರೋಗ್ಯ ಖಾತೆಯಿಂದ ಸಚಿವ ಸುಧಾಕರ್ ಅವರನ್ನು ಬದಲಾಯಿಸಿ ಎಂದು ನಿರ್ಮಾಪಕ ಕೆ. ಮಂಜು ನೀಡಿದ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.
ಕೆ. ಮಂಜು ಅಂದ್ರೆ ಯಾರು ಎಂಬುದೇ ನನಗೆ ಗೊತ್ತಿಲ್ಲ. ನಾನು ಯಾರ ಟೀಕೆಗಳಿಗೂ ತಲೆಕೆಡಿಸಿಕೊಳ್ಳುವುದಿಲ್ಲ. ಆರೋಗ್ಯ ಸಚಿವನಾಗಿ ಕೊರೋನಾ ನಿಯಂತ್ರಣಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನಮಗೆ ಜನರ ಆರೋಗ್ಯ ರಕ್ಷಣೆ ಮುಖ್ಯವಾಗಿದ್ದು ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಕೆಲಸ ಮಾಡುತ್ತೇನೆ. ಮುಖ್ಯಮಂತ್ರಿಗಳು ಚಿತ್ರರಂಗದ ಮನವಿಗೆ ಸ್ಪಂದಿಸಿದ್ದು ತಪ್ಪು ಎಂದು ಹೇಳುವುದಿಲ್ಲ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಮುಂದೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಜಿಮ್ ಮಾಲೀಕರು, ಶಿಕ್ಷಣ ಸಂಸ್ಥೆಗಳಿಂದಲೂ ಒತ್ತಡವಿದ್ದು ಜನರ ಜೀವ ಮತ್ತು ಜೀವನೋಪಾಯ ಎರಡೂ ಮುಖ್ಯವಾಗಿದೆ. ಯಾರನ್ನೋ ಮೆಚ್ಚಿಸುವ ಉದ್ದೇಶದಿಂದ ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕ್ರಮಕೈಗೊಳ್ಳಲಾಗಿದೆ. ಟೀಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ. ಜನರ ಆರೋಗ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಕಳೆದ ಎರಡು ತಿಂಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಆರು ಪಟ್ಟು ಜಾಸ್ತಿಯಾಗಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇಕಡ 50ರಷ್ಟು ಕೇವಲ 10 ಜಿಲ್ಲೆಗಳಲ್ಲಿದ್ದು, ಬೆಂಗಳೂರು ನಗರ ಜಿಲ್ಲೆ ಇವುಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.