ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಮುಂದುವರೆದಿದೆ.
ಯಾವ ಪಕ್ಷ ಯಾವ ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಧಾನಸಭೆ ಚುನಾವಣೆ ಫಲಿತಾಂಶದ ದಿನ ಯಾವುದೇ ಚರ್ಚೆ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ.
ದೇಶದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರಿದ್ದು ಈ ಸಂದರ್ಭದಲ್ಲಿ ಫಲಿತಾಂಶದ ನಂತರ ಟಿವಿ ಚರ್ಚೆಗಳಲ್ಲಿ ಭಾಗಿಯಾಗುವುದಿಲ್ಲವೆಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ದೇಶದಲ್ಲಿ ಹಿಂದೆಂದೂ ಕಾಣದಂತಹ ಬಿಕ್ಕಟ್ಟು ಉಂಟಾಗಿದೆ. ಕೋವಿಡ್ ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ ಚುನಾವಣೆಯಲ್ಲಿನ ಸೋಲು ಗೆಲುವಿನ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷದ ನಾಯಕರು, ವಕ್ತಾರರು ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.
ಚುನಾವಣೆಯಲ್ಲಿ ಸೋಲಬಹುದು, ಇಲ್ಲವೇ ಗೆಲ್ಲಬಹುದು. ಆದರೆ, ದೇಶದ ಜನರಿಗೆ ಸದ್ಯದ ಪರಿಸ್ಥಿತಿಯಲ್ಲಿ ಆಕ್ಸಿಜನ್, ಬೆಡ್, ಮೆಡಿಸನ್, ವೆಂಟಿಲೇಟರ್ ಅಗತ್ಯವಿದ್ದು, ಅದನ್ನು ತಲುಪಿಸಲು ಜೊತೆಯಾಗಿ ನಿಲ್ಲಬೇಕಿರುವುದು ನಮ್ಮ ಕರ್ತವ್ಯವಾಗಿದೆ.ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಲು ನಾವು ಸಿದ್ಧವಾಗಿದ್ದೇವೆ ಎಂದು ಅವರು ಹೇಳಿದ್ದಾರೆ.