ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನೇಕ ತೀರ್ಮಾನ ಕೈಗೊಳ್ಳಲಾಗಿದ್ದು, ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ನಾಳೆಯಿಂದಲೇ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ಆಕ್ಸಿಜನ್ ವೈದ್ಯಕೀಯ ವ್ಯವಸ್ಥೆ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಆಕ್ಸಿಜನ್ ನಿರ್ವಹಣೆ ಉಸ್ತುವಾರಿ ವಹಿಸಲಾಗಿದೆ. ರೆಮ್ ಡೆಸಿವಿರ್, ಬೆಡ್, ವೈದ್ಯಕೀಯ ನಿರ್ವಹಣೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಖಾಸಗಿ, ಸರ್ಕಾರಿ ಆಸ್ಪತ್ರೆ ಬೆಡ್ ವ್ಯವಸ್ಥೆ, ಸಮಸ್ಯೆಗಳು ನಿವಾರಣೆಗೆ ಬಸವರಾಜ ಬೊಮ್ಮಾಯಿ ಮತ್ತು ಆರ್. ಅಶೋಕ್ ಅವರಿಗೆ ಜವಾಬ್ದಾರಿ ನೀಡಲಾಗಿದ್ದು, ವಾರ್ ರೂಮ್, ವೈದ್ಯಕೀಯ ಸಲಹೆ ನಿರ್ವಹಣೆ, ಸೋಂಕಿತರಿಗೆ ಲಭ್ಯವಿರುವ ವೈದ್ಯಕೀಯ ನೆರವು ಕಲ್ಪಿಸಲು ಸಚಿವ ಅರವಿಂದ ಲಿಂಬಾವಳಿಯವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯಕ್ಕೆ ಅಗತ್ಯವಾದ ರೆಮ್ ಡೆಸಿವಿರ್, ಆಕ್ಸಿಜನ್ ಪಡೆಯಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 800 ಮೆಟ್ರಿಕ್ ಟನ್ ಗೆ ಆಕ್ಸಿಜನ್ ಪ್ರಮಾಣ ಏರಿಕೆ ಮಾಡಲಾಗಿದೆ. ಕೇಂದ್ರ ಸಚಿವರೊಂದಿಗೆ ಸತತ ಸಂಪರ್ಕದಲ್ಲಿದ್ದು ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾದ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಆಕ್ಸಿಜನ್ ಪ್ರಮಾಣದಲ್ಲಿ ಕಡಿತ ಮಾಡಿ ರಾಜ್ಯಕ್ಕೆ ನೀಡಲು ಮನವಿ ಮಾಡಲಾಗಿದೆ ಎಂದು ಹೇಳಲಾಗಿದೆ.