ನವದೆಹಲಿ: ರಾಷ್ಟ್ರೀಯ ಲೋಕದಳ ಪಕ್ಷದ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಅಜಿತ್ ಸಿಂಗ್ ಮಾರಕ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
82 ವರ್ಷದ ಅಜಿತ್ ಸಿಂಗ್ ಅವರನ್ನು ದೆಹಲಿಯ ಗುರುಗ್ರಾಮದ ಮೆದಂತ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರರಾದ ಚೌಧರಿ ಅಜಿತ್ ಸಿಂಗ್ ಭಾಗಪತ್ ನಿಂದ 7 ಬಾರಿ ಸಂಸದರಾಗಿದ್ದರು.
ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅವರ ಸಂಪುಟದಲ್ಲಿ ಅಜಿತ್ ಸಿಂಗ್ ನಾಗರಿಕ ವಿಮಾನಯಾನ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 1979 -80ರಲ್ಲಿ ರಾಜಕೀಯ ಪ್ರವೇಶಿಸುವ ಮೊದಲು ಅವರು ಅಮೆರಿಕದಲ್ಲಿ ಕಂಪ್ಯೂಟರ್ ಉದ್ಯಮದಲ್ಲಿ ಕೆಲಸ ಮಾಡಿದ್ದರು.
ಖರಗ್ಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಚಿಕಾಗೋದ ಇಲಿನಾಯ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹಳೆಯ ವಿದ್ಯಾರ್ಥಿಯಾಗಿರುವ ಅಜಿತ್ ಸಿಂಗ್ 1986 ರಲ್ಲಿ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು.
7 ಬಾರಿ ಲೋಕಸಭೆ ಸದಸ್ಯರಾಗಿದ್ದ ಅವರ ನಿಧನದಿಂದ ಆರ್ಎಲ್ಡಿ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಜಾಟ್ ಪ್ರಾಬಲ್ಯದ ಪಶ್ಚಿಮ ಉತ್ತರ ಪ್ರದೇಶದಲ್ಲಿ ಪ್ರಭಾವ ಬೀರಲಿದೆ ಎನ್ನಲಾಗಿದೆ.