alex Certify 6 -10 ನೇ ತರಗತಿ ವಿದ್ಯಾರ್ಥಿಗಳಿಗೆ 10 ಸಾವಿರ ರೂ., ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

6 -10 ನೇ ತರಗತಿ ವಿದ್ಯಾರ್ಥಿಗಳಿಗೆ 10 ಸಾವಿರ ರೂ., ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ 2020-21 ನೇ ಸಾಲಿನ ಕಲಬುರಗಿ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಮಾಧ್ಯಮಿಕ, ಪ್ರೌಢಶಾಲೆಯಲ್ಲಿ ಓದುತ್ತಿರುವ (6 ರಿಂದ 10ನೇ ತರಗತಿವರೆಗೆ) ವಿದ್ಯಾರ್ಥಿಗಳಿಗೆ (ಕ್ರೀಡಾಪಟುಗಳಿಗೆ) ವಾರ್ಷಿಕ 10,000 ರೂ. ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.

ಇದಕ್ಕಾಗಿ ಮಾಧ್ಯಮಿಕ ಹಾಗೂ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿದಾರರು 2020-21 ನೇ ಸಾಲಿನ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ(6 ರಿಂದ 10 ನೇ ತರಗತಿ) ಯಲ್ಲಿ ಓದುತ್ತಿರಬೇಕು. ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2020 ರ ಏಪ್ರಿಲ್ 1 ರಿಂದ 2021ರ ಮಾರ್ಚ್ 31ರ ಅವಧಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ 2020 ರ ಏಪ್ರಿಲ್ 1 ರಿಂದ 2021 ರ ಮಾರ್ಚ್ 31 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.

ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಸ್ಕೂಲ್‍ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಜನೆಯಡಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಲ್ಲಿ ಅಥವಾ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನ ಮೊತ್ತವನ್ನು ವಾರ್ಷಿಕವಾಗಿ 10,000 ರೂ. ಗಳನ್ನು ಮಾತ್ರ ಮಂಜೂರು ಮಾಡಲಾಗುವುದು.

ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳು ಕೇಂದ್ರ ಕಚೇರಿಯ http://serviceonline.gov.in/Karnataka ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ 2021ರ ಮೇ 25 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣ, ಕಚೇರಿಯನ್ನು ಹಾಗೂ ಮೊಬೈಲ್ ಸಂಖ್ಯೆ 9844029235, 9902588176 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...