ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಬ್ರೇಕ್ ಹಾಕಲು ಲಾಕ್ ಡೌನ್ ವಿಸ್ತರಣೆ ಮಾಡಲೇಬೇಕಾದ ಅನಿವಾರ್ಯ ಸ್ಥಿತಿ ರಾಜ್ಯ ಸರ್ಕಾರಕ್ಕೆ ಎದುರಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಇಂದು ಸಂಜೆ ನಡೆಯಲಿರುವ ಮಹತ್ವದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾಗಿ ಒಂದು ವಾರವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕೊಂಚ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಡಿಮೆಯಾಗುತ್ತಿದೆ. ಆದರೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕೊರೊನಾ ಸೋಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ರಾಜ್ಯದಲ್ಲಿ ಮೇ 24ರ ಬಳಿಕ ಇನ್ನೂ ಒಂದು ವಾರ ಲಾಕ್ ಡೌನ್ ಜಾರಿ ಮಾಡುವಂತೆ ಒತ್ತಾಯಿಸಲಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮ, ಪಾಸಿಟಿವಿಟಿ ಸಂಖ್ಯೆ ಬಗ್ಗೆಯೂ ಚರ್ಚೆಗೆ ಬರಲಿದೆ.
ರಾಜ್ಯದ 3 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಮುರುಗೇಶ್ ನಿರಾಣಿ, ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡುವುದು ಒಳ್ಳೆಯದು. ನಗರ ಪ್ರದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಆದರೆ ಗ್ರಾಮಿಣ ಪ್ರದೇಶಗಳಲ್ಲಿ ಹೆಚ್ಚಾಗುತ್ತಿದೆ. ಹಾಗಾಗಿ ಇನ್ನೂ 10 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಉತ್ತಮ. ಈ ಬಗ್ಗೆ ಈಗಗಾಲೇ ನಾವೆಲ್ಲರೂ ಸಿಎಂ ಯಡಿಯೂರಪ್ಪನವರಿಗೆ ತಿಳಿಸಿದ್ದೇವೆ. ಅಂತಿಮವಾಗಿ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.
ಒಟ್ಟಾರೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಕೇಸ್ ಕಡಿಮೆ ಮಾಡಬೇಕೆಂದರೆ ಲಾಕ್ ಡೌನ್ ವಿಸ್ತರಣೆ ಅನಿವಾರ್ಯವಾಗಿದ್ದು, ಮೇ 24ರ ಬಳಿಕವೂ ರಾಜ್ಯ ಲಾಕ್ ಆಗುವ ಬಗ್ಗೆ ಸಿಎಂ ಘೋಷಿಸಲಿದ್ದಾರಾ ಕಾದು ನೋಡಬೇಕಿದೆ.