ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರದ ಹಣ ಆನ್ ಲೈನ್ ಮೂಲಕ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.
ಲೈಸೆನ್ಸ್ ಹೊಂದಿದ ಹಾಗೂ ನೋಂದಣಿ ಮಾಡಿಸಿದ ಆಟೋರಿಕ್ಷಾ, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಪರಿಹಾರವಾಗಿ ರಾಜ್ಯ ಸರ್ಕಾರ ಘೋಷಿಸಿರುವ 3,000 ರೂಪಾಯಿ ಪರಿಹಾರ ಧನ ಪಡೆಯಲು “ಸೇವಾಸಿಂಧು” ವೆಬ್ ಪೋರ್ಟಲ್ ಮೂಲಕ ಅರ್ಜಿ ಸ್ವೀಕರಿಸಲು ಅಗತ್ಯವಿರುವ ತಂತ್ರಾಂಶವನ್ನು ಸಿದ್ಧಪಡಿಸಲಾಗುತ್ತಿದೆ. ಈ ವ್ಯವಸ್ಥೆ ಕಾರ್ಯರೂಪಕ್ಕೆ ಬಂದೊಡನೆ ಅರ್ಹ ಚಾಲಕರ ಅರ್ಜಿಗಳನ್ನು ಆಹ್ವಾನಿಸಲಾಗುವುದು. ಪರಿಹಾರ ಧನವನ್ನು ಅವರ ಖಾತೆಗೆ ನೇರವಾಗಿ ಡಿ.ಬಿ.ಟಿ. ಮೂಲಕ ವರ್ಗಾಯಿಸಲಾಗುತ್ತದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ ಆಟೋರಿಕ್ಷಾ, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರುಗಳು ಪರಿಹಾರ ಧನ ಕೋರಿ ಅನ್ಯಮಾರ್ಗದಲ್ಲಿ ಅರ್ಜಿ ಸಲ್ಲಿಸಲು ಪರಿಶ್ರಮಪಡಬೇಕಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.