ಬೆಂಗಳೂರು: 30 ಲಕ್ಷ ರೈತರಿಗೆ 20,810 ಕೋಟಿ ರೂಪಾಯಿ ಬೆಳೆ ಸಾಲ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ಮೇರೆಗೆ ಈ ಸಾಲಿನಲ್ಲಿ 30 ಲಕ್ಷ ರೈತರಿಗೆ 20,810 ಕೋಟಿ ರೂಪಾಯಿ ಬೆಳೆ ಸಾಲ ನೀಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಳೆದ ಸಾಲಿನಲ್ಲಿ 24.50 ಲಕ್ಷ ರೈತರಿಗೆ 15,400 ಕೋಟಿ ರೂ. ಅಲ್ಪಾವಧಿ, ಮಧ್ಯಮಾವಧಿ, ದೀರ್ಘಾವಧಿ ಸಾಲ ನೀಡುವ ಗುರಿ ಹೊಂದಲಾಗಿದ್ದು, 25,93,982 ರೈತರಿಗೆ 17,490 ಕೋಟಿ ಸಾಲ ನೀಡುವ ಮೂಲಕ ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆ ಮೇರೆಗೆ 2021 -22 ನೇ ಸಾಲಿನಲ್ಲಿ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ. ಹೆಚ್ಚಿನ ರೈತರಿಗೆ ಸಾಲ ತಲುಪಿಸುವಂತೆ ಸಿಎಂ ಸೂಚನೆ ನೀಡಿದ್ದು ಅಂತೆಯೇ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಗಳ ಮೂಲಕ ರೈತರಿಗೆ ಅಗತ್ಯವಾದ ಸಾಲ ನೂರಕ್ಕೆ ನೂರರಷ್ಟು ದೊರಕಿಸಿಕೊಡಲು ಡಿಸಿಸಿ ಬ್ಯಾಂಕುಗಳು ಮುಂದಾಗಬೇಕು ಎಂದು ಹೇಳಿದ್ದಾರೆ.