ಬೆಂಗಳೂರು: ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರ ಬಹುಚರ್ಚಿತ ವಿಚಾರವಾಗಿದೆ. ಕಳೆದ ವರ್ಷ ಸವಾಲು ಎದುರಿಸಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಿದ್ದೆವು. ಆದರೆ ಈಬಾರಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ವಿಭಿನ್ನವಾದ ಪರಿಸ್ಥಿತಿಯನ್ನು ನಾವು ಎದುರಿಸಬೇಕಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಪರೀಕ್ಷೆ ಬಗ್ಗೆ ಶಿಕ್ಷಣ ತಜ್ಞರು, ಶಿಕ್ಷಕರು, ಪೋಷಕರ ಜೊತೆಯೂ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಈ ವರ್ಷವೂ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದೆವು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸಲು ನಿರ್ಧರಿಸಿದ್ದೇವೆ.
ಮಕ್ಕಳ ಹಿತದೃಷ್ಟಿ ಹಾಗೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಧ್ಯಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸದಿರಲು ನಿರ್ಧರಿಸಲಾಗಿದೆ. ಈ ವರ್ಷ ದ್ವಿತೀಯ ಪಿಯು ಪರೀಕ್ಷೆ ರದ್ದು ಪಡಿಸಲಾಗಿದ್ದು, ಪರೀಕ್ಷೆ ಇಲ್ಲದೇಯೇ ಪಾಸ್ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಪ್ರಥಮ ಪಿಯುಸಿ ಪರೀಕ್ಷೆ ಆಧಾರದಲ್ಲಿ ಗ್ರೇಡಿಂಗ್ ನೀಡಲು ನಿರ್ಧರಿಸಲಾಗಿದೆ ಎಂದರು.
ಯಾವುದೇ ವಿದ್ಯಾರ್ಥಿಗೆ ಈ ಗ್ರೇಡಿಂಗ್ ಸಿಸ್ಟಮ್ ಬಗ್ಗೆ ಅಸಮಾಧಾನವಿದ್ದರೆ ಪರೀಕ್ಷೆ ನಡೆಸಲೇಬೇಕು ಎಂಬ ಉದ್ದೇಶವಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಕೋವಿಡ್ ಮುಗಿದ ಬಳಿಕ ಸೂಕ್ತ ಕ್ರಮ ಕೈಗೊಂಡು ಪರೀಕ್ಷೆ ನಡೆಸುವುದಾಗಿ ತಿಳಿಸಿದರು.