ಬೆಂಗಳೂರು: ಕನ್ನಡಿಗರ ಬಹುದಿನದ ಬೇಡಿಕೆ ಈಡೇರಿದ್ದು, ಬ್ಯಾಂಕ್ ಹುದ್ದೆಗೆ ಕನ್ನಡದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದೆ.
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(IBPS) 43 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಪ್ರಾದೇಶಿಕ ಭಾಷೆಗಳಲ್ಲಿ ಪೂರ್ವಭಾವಿ ಮತ್ತು ಮುಖ್ಯಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ. ದೇಶಾದ್ಯಂತ 10,368 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ರಾಜ್ಯದಲ್ಲಿನ ಅಭ್ಯರ್ಥಿಗಳು ಕನ್ನಡದಲ್ಲಿ ಪರೀಕ್ಷೆ ಬರೆಯಬಹುದು. ಇದರೊಂದಿಗೆ ಕೊಂಕಣಿ, ಇಂಗ್ಲಿಷ್, ಹಿಂದಿಯಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯುವುದರಿಂದ ಹೆಚ್ಚಿನ ಅಭ್ಯರ್ಥಿಗಳಿಗೆ ಅನುಕೂಲವಾಗುತ್ತದೆ ಎನ್ನಲಾಗಿದೆ.
IBPS ರೀತಿಯಲ್ಲಿಯೇ ಬ್ಯಾಂಕ್ ಹುದ್ದೆಗಳಿಗೂ ನೇಮಕಾತಿ ನಡೆಸುವ ರಾಷ್ಟ್ರೀಯ ನೇಮಕಾತಿ ಏಜೆನ್ಸಿ(NRA) ಸಾಮಾನ್ಯ ಅರ್ಹತಾ ಪರೀಕ್ಷೆ ಸಿಇಟಿ ಕೂಡ ಕನ್ನಡದಲ್ಲಿಯೇ ನಡೆಸಬೇಕೆಂಬ ಒತ್ತಾಯ ಕೇಳಿಬಂದಿದೆ.
ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಎಲ್ಲಾ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಯನ್ನು ಕನ್ನಡದಲ್ಲಿಯೂ ನಡೆಸಬೇಕು. ಜೊತೆಗೆ ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಕೂಡ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕೆಂದು ಹೇಳಲಾಗಿದೆ.