ಬೆಂಗಳೂರು: ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಷರತ್ತುಬದ್ಧ ಅನುಮತಿ ನೀಡಲಾಗುವುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಮಂಟಪಗಳಲ್ಲಿ ಮದುವೆಗೆ 40 ಜನರಿಗೆ ಅವಕಾಶ ನೀಡಲಾಗಿದ್ದು, ಭಾಗಿಯಾಗುವವರಿಗೆ ಪಾಸ್ ಕಡ್ಡಾಯವಾಗಿರುತ್ತದೆ. ಹೋಟೆಲ್, ರೆಸಾರ್ಟ್ ಗಳು, ಪಾರ್ಟಿ ಹಾಲ್ ಗಳಲ್ಲಿಯೂ ಮದುವೆ ಮಾಡಬಹುದು. ಸೋಮವಾರದಿಂದ ಜಾರಿಗೆ ಬರುವಂತೆ ಷರತ್ತುಬದ್ಧ ಅನುಮತಿ ನೀಡಲು ನಿರ್ಧರಿಸಲಾಗಿದೆ.
ಸಭೆಯಲ್ಲಿ ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ನಿಗಾ ವಹಿಸಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿದ್ದು, ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಮೇಲೆ ನಿಗಾ ವಹಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.