ರಾಜ್ಯದಲ್ಲಿ ಕೊರೊನಾ ಆರ್ಭಟ ತಣ್ಣಗಾಗುತ್ತಿದ್ದು, ಈ ಕಾರಣಕ್ಕೆ ಹಂತಹಂತವಾಗಿ ಲಾಕ್ ಡೌನ್ ತೆರವುಗೊಳಿಸಲಾಗುತ್ತಿದೆ. ಆದರೂ ಕೂಡ ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದರ ಮಧ್ಯೆ ತಜ್ಞರ ಸಮಿತಿ ಶಾಲಾ -ಕಾಲೇಜುಗಳನ್ನು ಸಹ ಹಂತಹಂತವಾಗಿ ಆರಂಭಿಸಬೇಕೆಂಬ ಸಲಹೆ ನೀಡಿದ್ದು, ಮೊದಲ ಹಂತದಲ್ಲಿ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆದರೆ ಕಾಲೇಜು ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳು, ಬೋಧಕ – ಬೋಧಕೇತರ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡುವುದು ಅಗತ್ಯವಾಗಿದೆ.
ಈ ಹಿನ್ನಲೆಯಲ್ಲಿ ಸರ್ಕಾರ ಜಿಲ್ಲಾಡಳಿತಗಳಿಗೆ ಕಾಲೇಜಿನ ಕ್ಯಾಂಪಸ್, ಸಮುದಾಯ ಭವನ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳು, ಬೋಧಕ – ಬೋಧಕೇತರ ಸಿಬ್ಬಂದಿಗೆ ಲಸಿಕೆ ಅಭಿಯಾನ ಕೈಗೊಳ್ಳುವಂತೆ ಸೂಚನೆ ನೀಡಿದ್ದು ಈ ಹಿನ್ನೆಲೆಯಲ್ಲಿ ಅಗತ್ಯ ತಯಾರಿ ನಡೆಯುತ್ತಿದೆ.
ಇದಕ್ಕಾಗಿ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಪಟ್ಟಿ ತಯಾರಿಸಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತು ಕೆಲವು ಜಿಲ್ಲೆಗಳಲ್ಲಿ ಜುಲೈ 1ರಿಂದ ಲಸಿಕೆ ಅಭಿಯಾನ ನಡೆಯಲಿದೆ ಎಂದು ತಿಳಿದುಬಂದಿದೆ.