ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮೂರನೇ ಹಂತದಲ್ಲಿ ಲಾಕ್ ಡೌನ್ ಸಡಿಲಿಕೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ನಾಳೆ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ.
ಜುಲೈ 5ರ ಬಳಿಕ ಅನ್ ಲಾಕ್ 3.0 ಜಾರಿಗೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇನ್ನಷ್ಟು ವಲಯಗಳಿಗೆ ರಿಲೀಫ್ ಸಿಗಲಿದೆ. ನಾಳೆ ಸಂಜೆ 5:30ಕ್ಕೆ ಸಿಎಂ ಬಿ ಎಸ್ ವೈ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ಅನ್ ಲಾಕ್ 3.0 ಕುರಿತು ಅಂತಿಮ ರೂಪುರೇಷೆ ಕೈಗೊಳ್ಳುವ ಸಾಧ್ಯತೆ ಇದೆ.
ಅನ್ ಲಾಕ್ 3.0ನಲ್ಲಿ ಅಂಗಡಿ ಮುಂಗಟ್ಟು ತೆರೆಯಲು ಸಂಜೆ 5ರ ಬಳಿಕವೂ ಅವಕಾಶ, ಶಾಪಿಂಗ್ ಮಾಲ್, ಥಿಯೇಟರ್ ತೆರೆಯಲು ಅವಕಾಶ, ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ ಕುಳಿತು ತಿನ್ನಲು ಇನ್ನಷ್ಟು ಸಮಯ ವಿಸ್ತರಣೆ ಜೊತೆಗೆ ಪೂರ್ಣ ಪ್ರಮಾಣದಲ್ಲಿ ಜನರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಪ್ರಮುಖವಾಗಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಿ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮಾತ್ರ ಮುಂದುವರೆಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲೂ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.