ಬೆಂಗಳೂರು: ರಾಜ್ಯಕ್ಕೆ ಕೇಂದ್ರದ ಪಾಲಿನ ಹಣವನ್ನು ತ್ವರಿತವಾಗಿ ಬಿಡುಗಡೆಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಸಂದರ್ಭದಲ್ಲಿ ಮನವಿಗೆ ಸ್ಪಂದಿಸಿದ ನಿರ್ಮಲಾ ಸೀತಾರಾಮನ್ ಅವರು, ರಾಜ್ಯಕ್ಕೆ ಕೊಡಬೇಕಾದ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ ನಾನಾ ಯೋಜನೆಗಳಿಗೆ ಕೇಂದ್ರದಿಂದ ಬರಬೇಕಿರುವ ಹಣ ಬಿಡುಗಡೆಗೆ ಮನವಿ ಮಾಡಲಾಗಿದ್ದು, ಇದಕ್ಕೆ ಸ್ಪಂದಿಸಿದ ಸಚಿವರು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಕೇಂದ್ರದ ಪಾಲಿನ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದರು.
ಕಳೆದ ವರ್ಷದ ಜಿಎಸ್ಟಿ ಪರಿಹಾರದ ಬಾಕಿ ಮೊತ್ತ 11,800 ಕೋಟಿ ರೂಪಾಯಿಗಳನ್ನು ರಾಜ್ಯಕ್ಕೆ ನೀಡುವುದರ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೆ, ಈ ಬಾರಿಯೂ ಜಿಎಸ್ಟಿ ಪರಿಹಾರ ಮತ್ತು 18,000 ಕೋಟಿ ರೂ.ಗಳನ್ನು ಕೇಂದ್ರ ನೀಡಲಿದೆ ಎಂದು ಭರವಸೆ ನೀಡಿದ್ದಾರೆನ್ನಲಾಗಿದೆ.