ಬೆಂಗಳೂರು: ಕೊರೋನಾ ಕಾರಣದಿಂದಾಗಿ ಸ್ಥಗಿತಗೊಂಡ ಶಾಲಾ, ಕಾಲೇಜುಗಳನ್ನು ಆರಂಭಿಸಲು ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಲಸಿಕೆ ನೀಡಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಸುರಕ್ಷತೆ ಕ್ರಮಗಳೊಂದಿಗೆ ಆಗಸ್ಟ್ 9 ರಿಂದ ಕಾಲೇಜುಗಳನ್ನು ಆರಂಭಿಸಬಹುದು ಎಂದು ಸಲಹೆ ನೀಡಲಾಗಿದೆ.
ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ನಂತರ ಪ್ರವೇಶಾತಿ ಪ್ರಕ್ರಿಯೆಗಳಿಗೆ ಕನಿಷ್ಠ ಎರಡರಿಂದ ಮೂರು ವಾರಗಳ ಅವಕಾಶ ನೀಡಿ ಪದವಿ ಕಾಲೇಜು ಆರಂಭಿಸುವುದು ಸೂಕ್ತ ಎಂದು ದೊರೆಸ್ವಾಮಿ ಸಲಹೆ ನೀಡಿದ್ದಾರೆ.
ಡಾ. ದೇವಿಶೆಟ್ಟಿ ನೇತೃತ್ವದ ಕಾರ್ಯಪಡೆ ಶಾಲೆಗಳ ಪುನಾರಂಭ ಕುರಿತಂತೆ ಮಾಡಿರುವ ಶಿಫಾರಸಿನ ಅನ್ವಯ ಅಗತ್ಯ ಕ್ರಮ ಕೈಗೊಂಡು ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಬಹುದು. ಇಡೀ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಬದಲು ಜಿಲ್ಲಾವಾರು ಶಾಲೆಗಳನ್ನು ಆರಂಭಿಸುವ ಕುರಿತು ಜಿಲ್ಲಾಧಿಕಾರಿಗಳಿಗೆ ತೀರ್ಮಾನ ಕೈಗೊಳ್ಳಲು ಅವಕಾಶ ನೀಡಬೇಕು ಎಂದು ಹೇಳಲಾಗಿದೆ.