ಬೆಂಗಳೂರು: ರಾಜ್ಯದಲ್ಲಿ ಚುರುಕು ಪಡೆದುಕೊಂಡಿರುವ ಮುಂಗಾರು ನಾಳೆಯಿಂದ 4 ದಿನಗಳ ಕಾಲ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತದ ಪರಿಣಾಮದಿಂದಾಗಿ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 14 ರಿಂದ 17 ರವರೆಗೆ ಗುಡುಗು ಸಹಿತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಆರೆಜ್ ಅಲರ್ಟ್ ಘೋಷಿಸಲಾಗಿದೆ.
ಅದೇ ರೀತಿ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರ್ಗಿ, ಯಾದಗಿರಿ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಜುಲೈ 14 ರಿಂದ 17 ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.