ಬೆಂಗಳೂರು: ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆ, ಸೇತುವೆಗಳು ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ. ಕೆಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಅನೇಕ ಭಾಗದಲ್ಲಿ ಮನೆಗಳು ಕುಸಿದಿವೆ.
ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಗುಡುಗು ಸಹಿತ 20 ಸೆಂ.ಮೀ. ಗಿಂತ ಅಧಿಕ ಮಳೆಯಾಗುವ ಸಂಭವವಿದ್ದು, 7 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಮಳೆಯ ಅಬ್ಬರ ಜೋರಾಗಿದೆ. ಜುಲೈ 24 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 27 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಗಂಟೆಗೆ ಗರಿಷ್ಠ 60 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು, 4.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಕಡಲಿಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಉಂಟಾದ ಪರಿಣಾಮ ಹಾಗೂ ಮಹಾರಾಷ್ಟ್ರ, ಕರ್ನಾಟಕದ ಕರಾವಳಿ ಪ್ರದೇಶದ ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ಭಾರಿ ಮಳೆಯಾಗಲಿದೆ. ನಂತರ ಮಳೆ ತೀವ್ರತೆ ಕಡಿಮೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.