ಬೆಳಗಾವಿ: ಬೆಳಗಾವಿ ಜಿಲ್ಲೆ 7 ತಾಲ್ಲೂಕುಗಳ 113 ಗ್ರಾಮಗಳಲ್ಲಿ ಪ್ರವಾಹದಿಂದ ಹಾನಿಯಾಗಿದ್ದು, ಹಲವೆಡೆ ಸಂತ್ರಸ್ಥರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಪ್ರವಾಹದಿಂದ ಹಾನಿಗೀಡಾದ ಪ್ರದೇಶಗಳ ಸಮೀಕ್ಷೆ ನಡೆಸಿದ ಸಿಎಂ, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದಾರೆ. ನಂತರ ಬೆಳಗಾವಿ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕೃಷ್ಣಾ ನದಿ ಪಾತ್ರದಲ್ಲಿ ಒಳ ಹರಿವು ಹೆಚ್ಚಾಗಿರುವುದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಕಂಡು ಬಂದಿದ್ದು, NDRF, SDRF, ಅಗ್ನಿಶಾಮಕ ಸಿಬ್ಬಂದಿ ಸನ್ನದ್ಧರಾಗಿದ್ದಾರೆ. ಪರಿಸ್ಥಿತಿ ಎದುರಿಸಲು ಎಲ್ಲ ಮುಂಜಾಗ್ರತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಉತ್ತರಕನ್ನಡ, ಶಿವಮೊಗ್ಗ ಸೇರಿದಂತೆ ಹಲವೆಡೆ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. ಹಾಳಾದ ಸೇತುವೆ, ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಲು ಅಗತ್ಯವಾದ ಹಣ ನೀಡಲಾಗುವುದು. ತಕ್ಷಣವೇ ಕಾರ್ಯಪ್ರವೃತ್ತರಾಗಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಾಳೆ ಉತ್ತರ ಕನ್ನಡ ಜಿಲ್ಲೆಗೆ ಹೋಗಿ ಬರುತ್ತೇನೆ ಎಂದು ಹೇಳಿದ್ದಾರೆ.