ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ಬಾಂಬ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಜಗದೀಶ್ ಶೆಟ್ಟರ್, ಮತ್ತು ಈಶ್ವರಪ್ಪ ಟೀಂ ಹೊರಗೆ ಹೋಗುತ್ತದೆ ಎಂದು ಹೇಳಲಾಗಿದ್ದ ಆಡಿಯೋ ರಾಜಕೀಯದಲ್ಲಿ ಭಾರಿ ಬದಲಾವಣೆಯ ಸುಳಿವು ನೀಡಿತ್ತು.
ಅದು ನಿಜವಾಗಿದೆ. ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರದಿರಲು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿರ್ಧರಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರುವುದಿಲ್ಲ ಎಂದು ಮಾಜಿ ಸಚಿವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಾನು ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕನಾಗಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಪಕ್ಷದ ವರಿಷ್ಠರು ಜವಾಬ್ದಾರಿ ನೀಡಿದರೆ ನಿರ್ವಹಿಸುತ್ತೇನೆ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಶೆಟ್ಟರ್ ಹೇಳಿದ್ದಾರೆ
ಕಟೀಲು ಆಡಿಯೋಗೂ ಇದಕ್ಕೂ ಸಂಬಂಧವಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರವಾಗಿದೆ. ನನ್ನ ನಿರ್ಧಾರದ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಮಾಜಿ ಸಿಎಂ ಯಡಿಯೂರಪ್ಪನವರ ಗಮನಕ್ಕೆ ತಂದಿದ್ದೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನೈತಿಕ ಕಾರಣದಿಂದ ನಾನು ಸಂಪುಟಕ್ಕೆ ಸೇರುವುದಿಲ್ಲ ಎಂದು ತಿಳಿಸಿದ್ದು, ಈ ಹಿಂದೆ ನಾನು ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿದ್ದೇನೆ. ಈಗಲೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.