ಬೆಂಗಳೂರು: ಅನ್ ಲಾಕ್ ಜಾರಿ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಡೆಲ್ಟಾ ಪ್ಲಸ್, ಮೂರನೇ ಅಲೆ ಭೀತಿ ನಡುವೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಜನರು ಮದುವೆ, ಹುಟ್ಟುಹಬ್ಬ, ಪಾರ್ಟಿಗಳನ್ನು ಆಯೋಜನೆ ಮಾಡಿ ಸಂಭ್ರಮಾಚರಣೆಯಲ್ಲಿ ತೊಡಗುತ್ತಿದ್ದು, ಅಪಾಯದ ಮುನ್ಸೂಚನೆಯಾಗಿದೆ ಎಂದು ಹೇಳಿದ್ದಾರೆ. ಕಳೆದ ಒಂದು ವಾರದಿಂದ ಪ್ರತಿದಿನ 300-400 ಪ್ರಕರಣಗಳು ಪತ್ತೆಯಾಗುತ್ತಿದ್ದು, ಮೈಕ್ರೋ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ನಿರೀಕ್ಷೆಗೂ ಮೀರಿ ಪ್ರಕರಣಗಳು ವರದಿಯಾಗುತ್ತಿದ್ದು, ಆತಂಕಕಾರಿ ಬೆಳವಣಿಗೆ ಎಂದಿದ್ದಾರೆ.
ಆನ್ಲೈನ್ನಲ್ಲಿ ದೇಶವಾಸಿಗಳ ಯೋಗಕ್ಷೇಮ ವಿಚಾರಿಸಿದ ಫೇಮಸ್ ಬಿಸ್ಕಿಟ್ ಬ್ರಾಂಡ್
ನಗರದಲ್ಲಿ ವ್ಯಾಕ್ಸಿನೇಷನ್ ಶೇ.70ರಷ್ಟು ಕೂಡ ರೀಚ್ ಆಗದಿರುವುದು, ಜನರ ಓಡಾಟ, ಕೋವಿಡ್ ನಿಯಮ ಉಲ್ಲಂಘನೆ ಸೋಂಕು ಹರಡಲು ಪ್ರಮುಖ ಕಾರಣವಾಗಿದೆ. ಸೋಂಕಿತರ ಸಂಖ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ ಮೂರು ಕೇಸ್ ಒಂದೇ ಕಡೆ ಪತ್ತೆಯಾದರೆ ಮೈಕ್ರೋ ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸಲಾಗುತ್ತಿದ್ದು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ಒಂದು ವಾರದೊಳಗಾಗಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.