ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಈ ಮಧ್ಯೆ ಕೊರೊನಾ ಲಸಿಕೆ ಅಭಿಯಾನದಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆ ಕಾಣಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಅಭಾವವಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವಷ್ಟು ಲಸಿಕೆ ಸರ್ಕಾರಿ ಆಸ್ಪತ್ರೆಯಲ್ಲಿ ಸಿಗ್ತಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಮಹತ್ವ ನಿರ್ಧಾರ ತೆಗೆದುಕೊಂಡಿದೆ.
ಖಾಸಗಿ ಆಸ್ಪತ್ರೆಯಲ್ಲಿ ಬಳಕೆಯಾಗದೆ ಇರುವ ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಬಳಸಬಹುದಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತ ಸೂಚನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಹೇಳಿದ್ದಾರೆ. ಕೇಂದ್ರ ಸರ್ಕಾರದ ಬಳಿ ಲಭ್ಯವಿರುವ ಮಾಹಿತಿಯ ಪ್ರಕಾರ, ಖಾಸಗಿ ಆಸ್ಪತ್ರೆಗಳು ಇದುವರೆಗೆ ಗರಿಷ್ಠ ಶೇಕಡಾ 7ರಷ್ಟು ಲಸಿಕೆಗಳನ್ನು ಬಳಸಿವೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಲಸಿಕೆಗಳ ಖರೀದಿ ಮತ್ತು ವಿತರಣೆಯನ್ನು ಕೇಂದ್ರ ಸರ್ಕಾರದಿಂದ ಮಾಡಲಾಗುವುದು ಎಂದು ಜೂನ್ ತಿಂಗಳಿನಲ್ಲಿ ಹೇಳಿದ್ದರು. ಒಟ್ಟು ಲಸಿಕೆ ಉತ್ಪಾದನೆಯ ಶೇಕಡಾ 75 ರಷ್ಟನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಲು ನಿರ್ಧರಿಸಲಾಗಿತ್ತು. ಶೇಕಡಾ 25ರಷ್ಟು ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ನೀಡಲಾಗಿತ್ತು. ಆದ್ರೆ ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದ ಲಸಿಕೆಗಳ ಬಗ್ಗೆ ಅನೇಕರು ದೂರು ನೀಡಿದ್ದರು. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಈ ಬಗ್ಗೆ ಮಾತನಾಡಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬಳಕೆಯಾಗದ ಲಸಿಕೆಗಳನ್ನು ಬಳಸಲು ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡುವಂತೆ ವಿನಂತಿಸಿದ್ದರು.