ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚಾಗಿದ್ದು, ಸೋಂಕು ನಿಯಂತ್ರಣ ಉದ್ದೇಶದಿಂದ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಶ್ರೀ ಮಂಜುನಾಥ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಕೇರಳದಲ್ಲಿ ಕೊರೊನಾ ಸೋಂಕು ತೀವ್ರ ಹೆಚ್ಚಾಗುತ್ತಿದೆ. ಕೇರಳ ಹಾಗೂ ವಿವಿಧ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರಿಗೆ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 5 ರಿಂದ 15 ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮತ್ತು ಕಟೀಲು ದುರ್ಗಾಪರಮೇಶ್ವರಿ ದೇವಾಲಯಗಳು ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತೆರೆಯಲಿದ್ದು, ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುತ್ತದೆ.
ಸಾಮಾಜಿಕ ಅಂತರ ಪಾಲನೆ, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ತೀರ್ಥ ಪ್ರಸಾದ, ಸೇವೆ, ಅನ್ನ ಸಂತರ್ಪಣೆಗೆ ಅವಕಾಶ ಇರುವುದಿಲ್ಲ. ಶನಿವಾರ ಮತ್ತು ಭಾನುವಾರ ಭಕ್ತಾದಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ವಾರಾಂತ್ಯ ದಿನಗಳಲ್ಲಿ ವಸತಿಗೃಹಗಳಲ್ಲಿ ತಂಗುವಂತಿಲ್ಲ. ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಹೇಳಿದ್ದಾರೆ.