ಬೆಂಗಳೂರು: ಕೊರೋನಾ ಎರಡನೇ ಅಲೆ ಮುಗಿಯುವ ಹೊತ್ತಲ್ಲೇ ಮೂರನೇ ಅಲೆಯ ಆತಂಕ ಶುರುವಾಗಿದೆ. ಕಳೆದ ತಿಂಗಳು ಕೊರೋನಾ ನಿಯಂತ್ರಣಕ್ಕೆ ಬಂದಿದ್ದು, ನಂತರದಲ್ಲಿ ಏರು ಗತಿಯಲ್ಲಿ ಸಾಗುವ ಆತಂಕವಿದೆ.
ಈಗಾಗಲೇ ರಾಜ್ಯದೆಲ್ಲೆಡೆ ಮತ್ತು ಗಡಿ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕೊರೋನಾಗೆ ಕಡಿವಾಣ ಹಾಕಲು ಮತ್ತು ಕಠಿಣ ನಿಯಮಗಳನ್ನು ಮತ್ತೆ ಜಾರಿಗೊಳಿಸಲಾಗುವುದು ಎಂದು ಹೇಳಲಾಗಿದೆ.
ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೋನಾ ಹೆಚ್ಚಳಗೊಂಡ 15 ರಿಂದ 20 ದಿನಗಳ ನಂತರ ರಾಜ್ಯದಲ್ಲಿಯೂ ಸೋಂಕು ಹೆಚ್ಚಾಗಿತ್ತು. ಈ ಬಾರಿ ಅದಕ್ಕೆ ಅವಕಾಶ ನೀಡದೆ, ಮೊದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ. ಸೋಂಕಿತರ ಸಂಖ್ಯೆ ಹೆಚ್ಚಾದರೆ ಕಠಿಣ ನಿಯಮ ಜಾರಿಗೊಳಿಸಲಾಗುವುದು. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮದುವೆಗೆ ಹೆಚ್ಚಿನ ಜನ ಸೇರದಂತೆ ನಿರ್ಬಂಧ ಹೇರಲಾಗಿದೆ. ಅಂತ್ಯಸಂಸ್ಕಾರಕ್ಕೆ ಹೆಚ್ಚಿನ ಜನ ಸೇರುವಂತಿಲ್ಲ. ಸಭೆ, ಸಮಾರಂಭ, ಮೆರವಣಿಗೆ ಉತ್ಸವಗಳಿಗೆ ನಿರ್ಬಂಧ ಹೇರಲಾಗಿದೆ.
ಬೆಂಗಳೂರಿನಲ್ಲಿ ಬಿಬಿಎಂಪಿ ಕೊರೊನಾ ಸೋಂಕು ತಡೆಗೆ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಇಂದು ಮಧ್ಯಾಹ್ನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ ಸೇರಿದಂತೆ ಹಲವು ಅಧಿಕಾರಿಗಳು, ತಜ್ಞರು ಭಾಗವಹಿಸಲಿದ್ದಾರೆ. ತಜ್ಞರ ಸಲಹೆಯಂತೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಚರ್ಚಿಸಿ ಕಠಿಣ ನಿಯಮ ಜಾತಿ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಲಾಗಿದೆ.