ಬೆಂಗಳೂರು: ಸರ್ಕಾರ ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಮೀಟರ್ ಅಳವಡಿಸಲಿದೆ. ರೈತರಿಂದ ವಿದ್ಯುತ್ ಶುಲ್ಕ ವಸೂಲಿ ಮಾಡಲಿದೆ ಎಂಬ ಊಹಾಪೋಹಗಳ ಬಗ್ಗೆ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ರೈತರ ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಮೀಟರ್ ಅಳವಡಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಯಾವುದೇ ಊಹಾಪೋಹಗಳನ್ನು ರೈತರು ನಂಬಬಾರದು ಎಂದು ಮನವಿ ಮಾಡಿದ್ದಾರೆ.
ಇಲಾಖೆಯಲ್ಲಿ ಈ ಹಿಂದೆ ಏನಾದರೂ ತಪ್ಪಾಗಿದ್ದರೆ ಅದನ್ನು ಸರಿಪಡಿಸುವ ಮತ್ತು ಸುಧಾರಿಸುವ ನಿಟ್ಟಿನಲ್ಲಿ ಆದ್ಯತೆ ನೀಡಲಾಗುತ್ತದೆ. ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆಯಲಿದ್ದು, ಪ್ರಮಾದ ನಡೆದಿದ್ದರೆ ತನಿಖೆಗೂ ಸಿದ್ಧ ಎಂದು ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇಂಧನ ಇಲಾಖೆಯನ್ನು ಇನ್ನಷ್ಟು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.