
ಬೆಂಗಳೂರು: ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಅಗಸ್ಟ್ 28, 29 ಮತ್ತು 30 ರಂದು ನಡೆಯಲಿದೆ.
28ರಂದು ಶನಿವಾರ ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತದ ಪರೀಕ್ಷೆ ಇರುತ್ತದೆ.
29ರಂದು ಭಾನುವಾರ ಬೆಳಗ್ಗೆ 10.30ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
30ರಂದು ಭಾನುವಾರ ಬೆಳಗ್ಗೆ 11.30ರಿಂದ 12.50 ರವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಹಾಗೂ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯುತ್ತದೆ.
ರಾಜ್ಯದಲ್ಲಿ ಒಟ್ಟು 2,01,816 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲೇ ಇವೆ. ಉಳಿದ ಜಿಲ್ಲೆಗಳಲ್ಲಿ ಒಟ್ಟು 444 ಕೇಂದ್ರಗಳಿವೆ. ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಅಗಸ್ಟ್ 30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು. ಈ ಕೇಂದ್ರಗಳಲ್ಲಿ 1682 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪ್ರತಿ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಯಲ್ಲಿ 24 ಅಭ್ಯರ್ಥಿಗಳು ಪರೀಕ್ಷೆ ಬರೆಯುವಂತೆ ಹಾಗೂ ಪ್ರತಿ ಒಂದು ಬೆಂಚಿನಲ್ಲಿ ಇಬ್ಬರು ಅಭ್ಯರ್ಥಿಗಳು ಕುಳಿತುಕೊಳ್ಳುವಂತೆ ಹಾಗೂ ಎರಡು ಬೆಂಚ್ ನಡುವೆ ಮೂರು ಅಡಿ ಅಂತರ ಕಾಪಾಡಿಕೊಳ್ಳಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕ್ರಮ ವಹಿಸಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್, ಹ್ಯಾಂಡ್ ಸ್ಯಾನಿಟೈಸರ್ ಅಳವಡಿಸಲಾಗಿದೆ. ಬೆಂಗಳೂರಿನಲ್ಲಿರುವ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಬಿಬಿಎಂಪಿ ವತಿಯಿಂದ ಸ್ಯಾನಿಟೈಸ್ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ವಾರಾಂತ್ಯದ ಕರ್ಫ್ಯೂ ಇರುವ ಗಡಿ ಜಿಲ್ಲೆಗಳಲ್ಲಿ ಅಭ್ಯರ್ಥಿಗಳು ಮತ್ತು ಪೋಷಕರು ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ಅನುಕೂಲವಾಗಲು ಸಿಇಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರಿಗಣಿಸಿ ಅವಕಾಶ ನೀಡಲು ಎಲ್ಲ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಉಳಿದಂತೆ ಪರೀಕ್ಷೆಗೆ ಅಗತ್ಯವಾದ ಎಲ್ಲ ವ್ಯವಸ್ಥೆಗಳನ್ನೂ ಸಮರ್ಪಕವಾಗಿ ಮಾಡಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಮಾಡಿದೆ.