ಕೊರೊನಾ ಎರಡನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ – ಕಾಲೇಜುಗಳನ್ನು ಆರಂಭಿಸಲು ಸೂಚನೆ ನೀಡಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಶಾಲಾ – ಕಾಲೇಜುಗಳು ಆರಂಭವಾಗಿದ್ದರೂ ಸಹ ಪ್ರಥಮ ಪಿಯುಸಿಗೆ ದಾಖಲಾತಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೆಲವೆಡೆ ತರಗತಿಗಳು ಆರಂಭವಾಗಿರಲಿಲ್ಲ. ಆಗಸ್ಟ್ 23 ರಿಂದಲೇ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ಹೊರಡಿಸಿದ್ದು, ಸೆಪ್ಟಂಬರ್ 6 ರಿಂದ ಕಡ್ಡಾಯವಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಬೇಕು. ಜೊತೆಗೆ ಪ್ರತಿದಿನದ ವಿದ್ಯಾರ್ಥಿಗಳ ಹಾಜರಾತಿ ಮಾಹಿತಿಯನ್ನು ಇಲಾಖೆ ವೆಬ್ ಸೈಟ್ ನಲ್ಲಿ ದಾಖಲಿಸಬೇಕು ಎಂದು ತಿಳಿಸಿದೆ.