ಬೆಂಗಳೂರು: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಸಿಎಂ ಚಾಲನೆ ನೀಡಿದ್ದಾರೆ.
ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾತನಾಡಿ, ರೈತರು ತಮ್ಮ ಮಕ್ಕಳನ್ನು ಪೋಷಿಸಲು ಆಗದಂತಹ ಪರಿಸ್ಥಿತಿ ಇದೆ. ಹೀಗಾಗಿ ಮುಖ್ಯಮಂತ್ರಿಯವರಿಂದ ಮಹತ್ವದ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯನ್ನು ಅವರು ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.
ಹಣವಿಲ್ಲದೆ ರೈತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಈಗ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಆರಂಭಿಸಲಾಗಿದೆ. ರಾಜ್ಯ ಬಿಜೆಪಿ ಸರ್ಕಾರ ರೈತರ ಪರವಾಗಿದೆ. ರೈತರ ಮಕ್ಕಳಿಗೆ ನಮ್ಮ ರಕ್ಷಣೆ ಇದೆ. ರೈತರಿಗೆ ಸ್ವಾಭಿಮಾನಿ ರೈತ ಐಡಿ ಕಾರ್ಡ್ ನೀಡಲಾಗಿದೆ. ರಾಜ್ಯದ 78 ಲಕ್ಷ ರೈತರಿಗೆ ಐಡಿ ಕಾರ್ಡ್ ನೀಡಬೇಕಿದೆ. ಕೇಂದ್ರ ಸರ್ಕಾರ ಬೇಡಿಕೆಗಿಂತಲೂ ಹೆಚ್ಚು ಹಣ ಒದಗಿಸಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ರಾಜ್ಯದ ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ವರದಾನವಾದ ಈ ವಿಶಿಷ್ಟ ಕಾರ್ಯಕ್ರಮವನ್ನು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮವಾಗಿ ಘೋಷಿಸಿದ್ದರು. ಎಸ್ಎಸ್ಎಲ್ಸಿ ನತಂತರ ಶಿಕ್ಷಣಕ್ಕಾಗಿ ರೈತರ ಮಕ್ಕಳಿಗೆ ಆರ್ಥಿಕ ನೆರವು ನೀಡಲಿದ್ದು, ವಿದ್ಯಾರ್ಥಿಗಳ ಖಾತೆಗೆ ಶಿಷ್ಯವೇತನ ಜಮಾ ಮಾಡಲಾಗುವುದು.