ಚಾಮರಾಜನಗರ: ಮುಂಬರುವ ವಿಧಾನಸಭಾ ಚುನಾವಣೆ ಸಿಎಂ ಬೊಮ್ಮಾಯಿ ಮಾತ್ರವಲ್ಲ ಸಾಮೂಹಿಕ ನಾಯಕತ್ವದಲ್ಲಿ ನಡೆಯಲಿದೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ ಟಾಂಗ್ ನೀಡಿರುವ ಸಚಿವ ಎಸ್.ಟಿ.ಸೋಮಶೇಖರ್, ಬೊಮ್ಮಾಯಿ ನಾಯಕತ್ವ ಎಂದು ಅಮಿತ್ ಶಾ ಹೇಳಿದ ಮೇಲೆ ಮುಗಿಯಿತು. ಬೇರೆ ಹೇಳಿಕೆ ಅಗತ್ಯವಿಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ಮುಂಬರುವ ಚುನಾವಣೆಗೆ ಸಿಎಂ ಬಸವರಾಜ್ ಬೊಮ್ಮಾಯಿ ನಾಯಕತ್ವ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಹೇಳಿದ ಮೇಲೆ ಅದೇ ಫೈನಲ್. ಮತ್ತೆ ಬೇರೆಯವರು ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಸಿಎಂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಮುಂದೆ ಅದೇ ರೀತಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ಹಾಗಾಗಿ ಬೊಮ್ಮಾಯಿ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದು ಸರಿಯಾಗಿಯೇ ಇದೆ ಎಂದು ಹೇಳಿದರು.
ಸಿಎಂ ಬೊಮ್ಮಾಯಿ ನಾಯಕತ್ವದಲ್ಲೇ ಮುಂಬರುವ ಚುನಾವಣೆಯನ್ನು ಎದುರಿಸಲಾಗುವುದು ಎಂದು ಇತ್ತೀಚೆಗೆ ಹುಬ್ಬಳ್ಳಿಗೆ ಭೇಟಿ ನೀಡಿದ್ದ ಅಮಿತ್ ಶಾ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಚಿವ ಕೆ.ಎಸ್.ಈಶ್ವರಪ್ಪ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದಿದ್ದರು. ಇದೀಗ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸೋಮಶೇಖರ್, ಅಮಿತ್ ಶಾ ಹೇಳಿಕೆಯೇ ಅಂತಿಮ ಎಂದಿದ್ದಾರೆ.