ಬೆಳಗಾವಿ: ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲೇ ನಿಗದಿಯಾಗಿದ್ದ ವಿವಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ ಕಚೇರಿ ಎದುರು ಸೀಮೆಎಣ್ಣೆ ಕ್ಯಾನ್ ಹಿಡಿದುಕೊಂಡು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಪರೀಕ್ಷೆ ಮುಂದೂಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು. ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ವಿವಿ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.