ಬೆಂಗಳೂರು: ಕರ್ನಾಟಕ ಹೆದ್ದಾರಿ ಕಾಯ್ದೆ ಮತ್ತು 2005 ರಲ್ಲಿ ಹೊರಡಿಸಲಾಗಿರುವ ಸುತ್ತೋಲೆಯ ಅನ್ವಯ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಮಧ್ಯಭಾಗದಿಂದ ಎರಡು ಕಡೆಗೆ 40 ಮೀಟರ್ ವರೆಗೆ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಅದೇ ರೀತಿ ಜಿಲ್ಲಾ ಮುಖ್ಯ ರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ವರೆಗೆ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದ್ದು, ನಿಯಮ ಉಲ್ಲಂಘಿಸಿ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ.
ಈ ಕುರಿತಾದ ಆದೇಶವನ್ನು ಎಲ್ಲಾ ಇಲಾಖೆಗಳಿಗೆ ರವಾನೆ ಮಾಡುವಂತೆ ಸರ್ಕಾರದ ಪರ ವಕೀಲರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೆ, ಅನುಮತಿ ನೀಡಿರುವುದನ್ನು ಖಚಿತ ಪಡಿಸಿಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ. ಅನುಮತಿ ನೀಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಕಟ್ಟಡ ತೆರವಿಗೆ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠದಿಂದ ಇತ್ತೀಚೆಗೆ ಆದೇಶ ನೀಡಲಾಗಿತ್ತು. ಈ ಸಂದರ್ಭದಲ್ಲಿ 1999 ಡಿಸೆಂಬರ್ ನಲ್ಲಿ ಹೊರಡಿಸಿದ್ದ ಆದೇಶವನ್ನು ಉಲ್ಲೇಖಿಸಿದ್ದ ನ್ಯಾಯಪೀಠ ಸಂಬಂಧಿಸಿದ ಎಲ್ಲ ಇಲಾಖೆಗಳಿಗೆ ಆದೇಶ ರವಾನೆ ಮಾಡುವಂತೆ ಸರ್ಕಾರದ ಪರ ವಕೀಲರಿಗೆ ತಿಳಿಸಿದೆ. ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದೆ.