ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ಬಳಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಬ್ಬಿನ ಜಲ್ಲೆಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ ಎನ್ನುವುದು ಗೊತ್ತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ದೂರು ನೀಡಿದ್ದಾರೆ.
ಆರೋಪಿಗಳು ತನ್ನನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಮಾಡಿರುವುದಾಗಿ ಮಹಿಳೆ ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡ ಶಹಾಪುರ ಪೊಲೀಸರು ಆರೋಪಿಗಳಾದ ಆಟೋ ಚಾಲಕ ನಿಂಗರಾಜ, ಪೆಟ್ರೋಲ್ ಪಂಪ್ ನೌಕರ ಅಯ್ಯಪ್ಪ, ಬೀಡಾ ಅಂಗಡಿಯ ಭೀಮಾಶಂಕರ ಮತ್ತು ಮಹದೇವಪ್ಪ ಎಂಬುವವರನ್ನು ಬಂಧಿಸಿದ್ದಾರೆ. ಇವರೆಲ್ಲರೂ ಶಹಾಪುರ ನಿವಾಸಿಗಳಾಗಿದ್ದಾರೆ. ಎಸ್.ಪಿ. ಸಿ.ಬಿ. ವೇದಮೂರ್ತಿ ಪ್ರಕರಣದ ಪರಿಶೀಲನೆ ನಡೆಸಿದ್ದಾರೆ
ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸಂತ್ರಸ್ತೆಯನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 25,000 ರೂ. ಸಹಾಯಧನ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ದೌರ್ಜನ್ಯ ತಡೆ ಕಾಯ್ದೆಯಡಿ 50 ಸಾವಿರ ರೂಪಾಯಿ ಪರಿಹಾರ ನೀಡಲಾಗಿದೆ.
ಇನ್ನು ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದ ಬಗ್ಗೆ ಸದನದಲ್ಲಿ ಧ್ವನಿ ಎತ್ತುವುದಾಗಿ ಹೇಳಿದ್ದಾರೆ.