ಸಾಗರ್: ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ 25 ವರ್ಷದ ಯುವಕನನ್ನು ಬೆಂಕಿ ಹಚ್ಚಿ ಕೊಂದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.
ಗುರುವಾರ ತಡರಾತ್ರಿ ಸಾಗರ್ ನ ನಾರ್ಯೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೆಮ್ರಾ ಲಹರಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯುವಕನ ಮೈಮೇಲೆ ಸೀಮೆ ಎಣ್ಣೆ ಸುರಿದು ಯುವತಿಯ ಕುಟುಂಬಸ್ಥರು ಬೆಂಕಿ ಹಚ್ಚಿದ್ದಾರೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನೊಂದಿಗೆ ಸಂಬಂಧ ಹೊಂದಿದ್ದ ಯುವತಿ ಕೂಡ ಸುಟ್ಟ ಗಾಯಗಳಿಂದ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಯುವಕನನ್ನು ಸಾಗರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ನಾಲ್ವರು ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.