ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಕ್ಯಾಬಿನೆಟ್ ಸಭೆ ನಡೆಯಿತು. ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಬಗ್ಗೆ ಪಿಯೂಷ್ ಗೋಯಲ್ ಮತ್ತು ಅನುರಾಗ್ ಠಾಕೂರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಧಾನ ಮಂತ್ರಿ ಪೌಷ್ಟಿಕಾಂಶ ಯೋಜನೆಯನ್ನು ಆರಂಭಿಸಲು ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
ಮಂಗಳವಾರ, ಮೋದಿ ಅಧ್ಯಕ್ಷತೆಯಲ್ಲಿ ಮಂತ್ರಿ ಮಂಡಳಿಯ ಸಭೆ ನಡೆದಿತ್ತು. ಇದರಲ್ಲಿ ಹಲವು ಪ್ರಮುಖ ಅಂಶಗಳನ್ನು ಚರ್ಚಿಸಲಾಗಿತ್ತು. ಬುಧವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಪ್ರಧಾನ ಮಂತ್ರಿ ಪೌಷ್ಟಿಕಾಂಶ ಯೋಜನೆಯನ್ನು ಆರಂಭಿಸಲು, ಸಚಿವ ಸಂಪುಟ ನಿರ್ಧರಿಸಿದೆ.ಈ ಯೋಜನೆಯಡಿ, 11.2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಆಹಾರ ನೀಡಲು ಸರ್ಕಾರ ನಿರ್ಧರಿಸಿದೆ.
ಈ ಯೋಜನೆಯನ್ನು 5 ವರ್ಷಗಳವರೆಗೆ ನಡೆಸಲಾಗುವುದು. ಇದಕ್ಕಾಗಿ ಸರ್ಕಾರ 1.31 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ನಿರ್ಧರಿಸಿದೆ. ಈ ಯೋಜನೆಯು, ಪ್ರಸ್ತುತ ಇರುವ ಮಧ್ಯಾಹ್ನದ ಊಟ ಯೋಜನೆಯನ್ನು ಬದಲಿಸಲಿದೆ. ರಾಜ್ಯ ಸರ್ಕಾರಗಳ ನೆರವಿನಿಂದ ಕೇಂದ್ರ ಸರ್ಕಾರ ಈ ಯೋಜನೆಯನ್ನು ನಡೆಸುತ್ತದೆ. ಆದರೆ ಮುಖ್ಯವಾಗಿ ಎಲ್ಲಾ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿರುತ್ತದೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.