ಉಡುಪಿ: ಕೊರೋನಾ ನಡುವೆಯೂ ರಾಜ್ಯದಲ್ಲಿ 6 ನೇ ತರಗತಿ ಮೇಲ್ಪಟ್ಟು ಶಾಲೆ-ಕಾಲೇಜುಗಳನ್ನು ಆರಂಭಿಸಲಾಗಿದೆ. ದಸರಾ ಮುಗಿದ ನಂತರ 1 ರಿಂದ 5 ನೇ ತರಗತಿಗಳನ್ನು ಕೂಡ ಆರಂಭಿಸಲಾಗುವುದು.
ಉಡುಪಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಾಲೆಗಳನ್ನು ಆರಂಭಿಸಲು ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಸಿಎಂ ಟಾಸ್ಕ್ ಫೋರ್ಸ್ ಸಭೆ ನಡೆಸಲಿದ್ದು, ಶಾಲೆಗಳನ್ನು ಆರಂಭಿಸಲು ಆಸಕ್ತಿ ತೋರಿಸಿದ್ದಾರೆ ಎಂದು ತಿಳಿಸಿದ್ದಾರೆ.
ದಸರಾ ಹಬ್ಬ ಮುಗಿದ ನಂತರ ಎಲ್ಲಾ ಶಾಲೆಗಳಲ್ಲಿ ಬಿಸಿಯೂಟ ಆರಂಭಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಡ್ಡಾಯವಲ್ಲ. ಆನ್ಲೈನ್ ಮತ್ತು ಆಫ್ ಲೈನ್ ನಲ್ಲಿ ತರಗತಿ ನಡೆಯಲಿವೆ ಎಂದರು.