ಬೆಂಗಳೂರು: ಕಲ್ಲಿದ್ದಲು ಕೊರತೆಯ ಪರಿಣಾಮ ಬೀರತೊಡಗಿದೆ. ರಾಜ್ಯದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ.
ಕಲ್ಲಿದ್ದಲು ಕೊರತೆ ಉಂಟಾಗಿರುವುದರಿಂದ ರಾಜ್ಯದ ವಿದ್ಯುತ್ ಉತ್ಪಾದನೆ ಕೇಂದ್ರಗಳಲ್ಲಿ ವಿದ್ಯುತ್ ಉತ್ಪಾದನೆ ಕುಸಿದಿದೆ. 3000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಕುಸಿತವಾಗಿದ್ದು, ಬೇಡಿಕೆಯ ಶೇಕಡ 30 ರಷ್ಟು ಕಲ್ಲಿದ್ದಲು ಪೂರೈಕೆಯಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್ ಆರಂಭವಾಗಿದೆ.
ರಾಜ್ಯದಲ್ಲಿ ಬೇಡಿಕೆಗೆ ಅಗತ್ಯವಿರುವಷ್ಟು ವಿದ್ಯುತ್ ಉತ್ಪಾದನೆ ಆಗದಿರುವುದು ಪರಿಣಾಮ ಬೀರಿದ್ದು, ಹಲವೆಡೆ ಅಘೋಷಿತ ಪವರ್ ಕಟ್ ಮಾಡಲಾಗುತ್ತಿದೆ. ಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ರಾಜ್ಯದ ಬಹುತೇಕ ಭಾಗದಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಅಧಿಕೃತವಾಗಿ ಲೋಡ್ ಶೆಡ್ಡಿಂಗ್ ಜಾರಿಯಾಗಿಲ್ಲ. ಆದರೆ, ಪವರ್ ಕಟ್ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.
ಮಳೆ ಸೇರಿ ಹಲವು ಕಾರಣಗಳಿಂದ ಕಲ್ಲಿದ್ದಲು ಗಣಿಗಳಲ್ಲಿ ಉತ್ಪಾದನೆ ಕುಂಠಿತಗೊಂಡಿದೆ. ಇದರಿಂದ ಶಾಖೋತ್ಪನ್ನ ಕೇಂದ್ರಗಳಿಗೆ ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಉತ್ಪಾದನಾ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿರುವುದರಿಂದ ಅಘೋಷಿತ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ ಎನ್ನಲಾಗಿದೆ.