ಬೆಂಗಳೂರು: ಕಲ್ಲಿದ್ದಲು ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಕೊರತೆ ಎದುರಾಗಿ ವಿದ್ಯುತ್ ಕಡಿತವಾಗಲಿದೆ ಎಂಬ ಆತಂಕದಲ್ಲಿದ್ದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ.
ರಾಜ್ಯದಲ್ಲಿ ವಿದ್ಯುತ್ ಕಡಿತ ಮಾಡುವುದಿಲ್ಲ. ಮುಂದೆಯೂ ಕಡಿತವಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ ವಿದ್ಯುತ್ ಉತ್ಪಾದನಾ ಕೇಂದ್ರಗಳಿಗೆ ಪ್ರತಿದಿನ ಕಲ್ಲಿದ್ದಲು ಪೂರೈಕೆಯಲ್ಲಿ 2 ರೇಕ್ ಗಳಷ್ಟೇ ಕಡಿಮೆಯಾಗಿದೆ. ಕಲ್ಲಿದ್ದಲು ಸಂಗ್ರಹದಲ್ಲಿ ಎಡವಿಲ್ಲ. ಅಗತ್ಯವಿರುವಷ್ಟು ಕಲ್ಲಿದ್ದಲು ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಹೆಚ್ಚುವರಿ ರೇಕ್ ಗಳು ಬರುತ್ತಿದ್ದು, ವಿದ್ಯುತ್ ಕಡಿತ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಿದ್ಯುತ್, ಕಲ್ಲಿದ್ದಲು ಮತ್ತು ಪ್ರಕೃತಿ ವಿಕೋಪ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದ ಸಿಎಂ ಸುದ್ದಿಗಾರರೊಂದಿಗೆ ಮಾತನಾಡಿ, ಭಾರಿ ಮಳೆ ಕಾರಣ ಕಲ್ಲಿದ್ದಲು ಗಣಿಗಳಲ್ಲಿ ನೀರು ತುಂಬಿಕೊಂಡು ಸಮಸ್ಯೆಯಾಗಿತ್ತು. ಈಗ ಪರಿಸ್ಥಿತಿ ಸುಧಾರಿಸುತ್ತಿದ್ದು, ಬೇಡಿಕೆಯಷ್ಟು ಕಲ್ಲಿದ್ದಲು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ವಿದ್ಯುತ್ ಕಡಿತ ಮಾಡುವುದಿಲ್ಲ. ವಿದ್ಯುತ್ ಸರಬರಾಜು ಕಂಪನಿಗಳನ್ನು ಖಾಸಗಿಕರಣ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.