ಮಡಿಕೇರಿ: ಕಾವೇರಿ ಉಗಮ ಸ್ಥಳವಾದ ತಲಕಾವೇರಿಯಲ್ಲಿ ತೀರ್ಥೋದ್ಭವವಾಗಲಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ.
ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಲಕಾವೇರಿ ಮತ್ತು ಭಾಗಮಂಡಲ ಇದಕ್ಕಾಗಿ ಸಜ್ಜಾಗಿದ್ದು, ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಭಕ್ತರು ಕಾತರಿಸಿದ್ದಾರೆ. ಕಾವೇರಿ ದರ್ಶನದ ನಂತರ ಒಂದು ತಿಂಗಳು ತಲಕಾವೇರಿ ಕ್ಷೇತ್ರದಲ್ಲಿ ಜಾತ್ರೆಯ ಸಂಭ್ರಮ ಇರಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಪೆಮಿತ ಅವರು ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಬೆಂಗಳೂರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರಾದ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಭಗಂಡೇಶ್ವರ–ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ.ಕೃಷ್ಣಪ್ಪ ಮೊದಲಾದವರು ಭಾಗವಹಿಸಲಿದ್ದಾರೆ.