ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಗೆ ನವೆಂಬರ್ 7ರ ವರೆಗೆ 1000 ಹೆಚ್ಚುವರಿ ಬಸ್ ಗಳನ್ನು ಬಿಡಲಾಗುವುದು.
ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಕೆಎಸ್ಆರ್ಟಿಸಿ ಬಸ್ ಗಳು ಸಂಚರಿಸಲಿವೆ. ಬೆಂಗಳೂರಿನಿಂದ ರಾಜ್ಯದ ಶಿವಮೊಗ್ಗ, ಹಾಸನ, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಮಂಗಳೂರು, ಕುಂದಾಪುರ, ಶೃಂಗೇರಿ, ಮಡಿಕೇರಿ, ಮೈಸೂರು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಗೋಕರ್ಣ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ, ಕಲಬುರ್ಗಿ, ಬೀದರ್ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ ಗಳ ಕಾರ್ಯಾಚರಣೆ ಇರಲಿದೆ.
ಹೊರರಾಜ್ಯಗಳ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ, ಪುಣೆ, ಪಣಜಿಗೆ ಕೊಯಮತ್ತೂರು ಮೊದಲಾದ ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ. ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ಕೆಎಸ್ಆರ್ಟಿಸಿ ವೆಬ್ಸೈಟ್, ಗಣಕೀಕೃತ ಬುಕಿಂಗ್ ಕೌಂಟರ್ ಗಳ ಮೂಲಕ ಮುಂಗಡವಾಗಿ ಸೀಟು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ.