ಬೆಂಗಳೂರು: ರಾಜ್ಯದಲ್ಲಿ ಮುಂಗಾರುಮಳೆ ಪೈಪೋಟಿ ನೀಡುವಂತೆ ಹಿಂಗಾರು ಮಳೆ ಕೂಡ ಆರ್ಭಟಿಸುತ್ತಿದ್ದು, ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ಗುಡುಗು, ಸಿಡಿಲಿನಿಂದ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನವೆಂಬರ್ 1 ರಿಂದ 4 ರವರೆಗೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ನಂಬರ್ 3 ರಿಂದ 5 ರವರೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಕಾರಣದಿಂದ ನವೆಂಬರ್ 3 ಮತ್ತು 5 ರಂದು ಯೆಲ್ಲೋ ಅಲರ್ಟ್ ಹಾಗೂ ನವೆಂಬರ್ 4 ರಂದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಮಲೆನಾಡು ಜಿಲ್ಲೆಗಳ ಜೊತೆಗೆ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಿಗೆ ನವೆಂಬರ್ 4ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಬೀದರ್, ಯಾದಗಿರಿ, ಕಲ್ಬುರ್ಗಿ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ ಜಿಲ್ಲೆಗಳ ಭಾಗದಲ್ಲಿ ನವೆಂಬರ್ 1 ಮತ್ತು 2ರಂದು ಹೆಚ್ಚಿನ ಮಳೆಯಾಗಲಿದೆ. 3 ರಿಂದ 5 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.