ಬೆಳಗಾವಿ: ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಮೀನು ಮಾಲೀಕನೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆ ಮಚ್ಚೆ ಗ್ರಾಮದಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೀವ ಬಿಟ್ಟೇವು, ಜಮೀನು ಬಿಟ್ಟುಕೊಡುವುದಿಲ್ಲ ಎಂದು ರೈತರು, ರೈತ ಮಹಿಳೆಯರು ಪಟ್ಟು ಹಿಡಿದಿದ್ದಾರೆ.
ತಲೆತಿರುಗಿಸುತ್ತೆ ಈ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಶುಲ್ಕ…..!
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಧರಣಿ ನಿರತರನ್ನು ವಶಕ್ಕೆ ಪಡೆದು ರಸ್ತೆ ಕಾಮಗಾರಿಗೆ ಅವಕಾಶ ಮಾಡಿಕೊಡಲು ಮುಂದಾಗಿದ್ದಾರೆ. ಈ ವೇಳೆ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಪೊಲೀಸರು ರೈತ ಮಹಿಳೆಯರನ್ನು ಎಳೆದಾಡಿ, ಸೀರೆ ಹರಿದು ದಬ್ಬಾಳಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇನ್ನೊಂದೆಡೆ ರೈತರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದ ಜಮೀನು ಮಾಲೀಕ ಆಕಾಶ್ ಎಂಬಾತ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಕ್ಷಣ ಆತನನ್ನು ರಕ್ಷಿಸಲಾಗಿದೆ. ಅಧಿಕಾರಿಗಳು ಸರ್ವೆ ನಡೆಸಿದ ಜಾಗವನ್ನು ಬಿಟ್ಟು ಬೇರೆ ಜಮೀನುಗಳಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದು, ರಾಜಕೀಯ ಹಿತಾಸಕ್ತಿಗಾಗಿ ರೈತರ ಭೂಮಿ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.