ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ತಿರುಪತಿಯಲ್ಲಿ ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ತಿರುಪತಿಗೆ ಪ್ರಯಾಣ ಬೆಳೆಸಲಿದ್ದಾರೆ.
ದಕ್ಷಿಣ ವಲಯದ ರಾಜ್ಯಗಳ ಸಮನ್ವಯಕ್ಕೆ ಸಂಬಂಧಿಸಿದಂತೆ ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾತ್ರಿ ಏರ್ಪಡಿಸಿರುವ ಭೋಜನಕೂಟದಲ್ಲಿ ಭಾಗಿಯಾಗಲಿರುವ ಸಿಎಂ ತಿರುಪತಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.