ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಈಗಾಗಲೇ ಸಮೀಕ್ಷೆ ಕೈಗೊಳ್ಳಲಾಗಿದ್ದು, ವರದಿ ಬಂದ ಬಳಿಕ ಹಣಕಾಸು ಇಲಾಖೆ ಅನುಮೋದನೆ ಪಡೆದು ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೊಪ್ಪಳದ ಬಸಾಪುರ ಗ್ರಾಮದ ಎಂ.ಎಸ್.ಪಿ.ಎಲ್. ಖಾಸಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ಹಾನಿ ಸರ್ವೆ ನಡೆಸಿ ವರದಿ ನೀಡಲು ತಿಳಿಸಲಾಗಿದೆ. ವರದಿ ಬಂದ ಕೂಡಲೇ ರೈತರಿಗೆ ಪರಿಹಾರ ನೀಡಲಾಗುವುದು. ಸಂಕಷ್ಟ ಕಾಲದಲ್ಲಿ ರೈತರ ಪರವಾಗಿ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಅಧಿಕಾರಿಗಳು ರೈತರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಬೆಳೆ ಹಾನಿ ಪರಿಹಾರ ನೀಡುವುದು ನಿಶ್ಚಿತ ಎಂದು ಹೇಳಿದ್ದಾರೆ.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಳೆಹಾನಿಯಾಗಿದೆ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಅನುಮತಿ ದೊರೆತ ಕೂಡಲೇ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.