ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬಿ ಫಾರಂ ಸ್ವೀಕರಿಸಿದ ಸರ್ಕಾರಿ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಪರವಾಗಿ ಸಂಬಂಧಿಯೊಬ್ಬರು ಬಿ ಫಾರಂ ಸ್ವೀಕರಿಸಿದ್ದಾರೆ.
ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದ ಗಾಯತ್ರಿ ಶಾಂತೇಗೌಡ ಅವರು ಬೆಂಗಳೂರಿಗೆ ಹೋಗಿ ಬಿ ಫಾರಂ ಪಡೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಬೆಂಗಳೂರಿನಲ್ಲಿರುವ ಅಳಿಯನಿಗೆ ಬಿ ಫಾರಂ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ. ಆದರೆ, ಅವರ ಅಳಿಯ ಅನಾರೋಗ್ಯದ ಕಾರಣ ಸರ್ಕಾರಿ ಇಲಾಖೆಯೊಂದರಲ್ಲಿ ಅಧಿಕಾರಿಯಾಗಿರುವ ತಮ್ಮ ಸಹೋದರನನ್ನು ಕೆಪಿಸಿಸಿ ಕಚೇರಿಗೆ ಕಳುಹಿಸಿದ್ದಾರೆ.
ಅಲ್ಲಿ ಡಿ.ಕೆ. ಶಿವಕುಮಾರ್ ಅವರಿಂದ ಸರ್ಕಾರಿ ಅಧಿಕಾರಿ ಬಿ ಫಾರಂ ಪಡೆದುಕೊಂಡಿದ್ದಾರೆ. ಈ ವೇಳೆ ಫೋಟೋ ತೆಗೆದಿದ್ದು, ಬಿಜೆಪಿ ಮುಖಂಡರು ಈ ಬಗ್ಗೆ ಪ್ರಶ್ನಿಸಿದ್ದಾರೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ.