ಬೆಂಗಳೂರು: ನವೆಂಬರ್ 26ರಂದು ರಾಜ್ಯಕ್ಕೆ ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನ.26ರಂದು ಚೆನ್ನೈಗೆ ಅಪ್ಪಳಿಸಲಿರುವ ಸೈಕ್ಲೋನ್ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ಮೈಸೂರು, ಉಡುಪಿ, ಕರಾವಳಿ ಭಾಗದಲ್ಲಿ ಚಂಡಮಾರುತದ ಪರಿಣಾಮವುಂಟಾಗಲಿದ್ದು, ನ.28ರವರೆಗೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.
ಸೈಕ್ಲೋನ್ ಹಿನ್ನೆಲೆಯಲ್ಲಿ ಮತ್ತೆ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈಗಾಗಲೇ ಮಳೆಯಿಂದ ಮನೆ ಬಿದ್ದರೆ, ಮನೆಗೆ ನೀರು ನುಗ್ಗಿ ತೊಂದರೆಯಾದರೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಕಾಫಿ, ಭತ್ತ ಸೇರಿದಂತೆ ಬೆಳೆ ಹಾನಿಗೂ ಪರಿಹಾರ ನೀಡಲಾಗುತ್ತದೆ.
ಮಳೆಯಿಂದ ಆಗಿರುವ ಹಾನಿ ಬಗ್ಗೆ ನ.30ರೊಳಗೆ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ವರದಿ ಬಂದ ಬಳಿಕ 10 ದಿನಗಳೊಳಗೆ ರೈತರಿಗೆ ಪರಿಹಾರ ನೀಡಲಾಗುವುದು. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 680 ಕೋಟಿ ಹಣವಿದ್ದು, ರೈತರ ಖಾತೆಗೆ ನೇರ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಹೇಳಿದರು.