ಬೆಂಗಳೂರು: ಶೇಕಡ 40 ರಷ್ಟು ಕಮಿಷನ್ ಬಗ್ಗೆ ಗುತ್ತಿಗೆದಾರರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಪಕ್ಷದ ನಿಯೋಗದಿಂದ ದೂರು ನೀಡಲಾಗಿದೆ.
ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷದ ನಾಯಕರು ಮನವಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ರಮೇಶ್ ಕುಮಾರ್ ಮೊದಲಾದ ನಾಯಕರ ನಿಯೋಗದಿಂದ ಗುತ್ತಿಗೆದಾರರಿಂದ ಪ್ರಧಾನಿಗೆ ಬರೆದ ಪತ್ರ ಆಧರಿಸಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಶೇಕಡ 40 ರಷ್ಟು ಕಮಿಷನ್ ಬಗ್ಗೆ ಗುತ್ತಿಗೆದಾರರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ದೂರು ನೀಡಿದ್ದು, ದೂರು ನೀಡಿದ ಬಳಿಕ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಇಂತಹ ಆರೋಪ ಕೇಳಿಬಂದಿರುವುದು ರಾಜ್ಯದಲ್ಲಿ ಇದೇ ಮೊದಲು. ಒಟ್ಟು ಶೇಕಡ 70 ರಷ್ಟು ಹಣ ಕಮಿಷನ್ ರೂಪದಲ್ಲಿ ಹೋಗುತ್ತದೆ. 10 ಪರ್ಸೆಂಟ್ ಸರ್ಕಾರ ಎಂದು ಪ್ರಧಾನಿ ಮೋದಿ ನನ್ನ ಸರ್ಕಾರದ ವಿರುದ್ಧ ದಾಖಲೆ ಇಲ್ಲದೆ ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರು ಮಾಡಿದ ಆರೋಪಗಳ ಬಗ್ಗೆ ರಾಜ್ಯಪಾಲರಿಗೆ ಸೂಕ್ತ ದಾಖಲೆ ನೀಡಲಾಗಿದೆ. ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸರ್ಕಾರ ಮುಂದುವರೆಯಲು ಯಾವುದೇ ನೈತಿಕತೆ ಇಲ್ಲ. 300 ಕೋಟಿ ರೂಪಾಯಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎನ್ನುವುದು ಗೊತ್ತಾಗಿದೆ. ಕರ್ನಾಟಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಸಾಂವಿಧಾನಿಕವಾಗಿ ಸರ್ಕಾರ ನಡೆಸುತ್ತಿಲ್ಲ. ಆದಷ್ಟು ಬೇಗನೆ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ತರಬೇಕು ಎಂದು ಒತ್ತಾಯಿಸಿದ್ದಾರೆ.