ಬೆಳಗಾವಿ: ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಎರಡನೇ ಟಿಕೆಟ್ ಅನ್ನು ಲಖನ್ ಜಾರಕಿಹೊಳಿ ಅವರಿಗೆ ನೀಡುವಂತೆ ಕೋರಲಾಗಿತ್ತು. ಟಿಕೆಟ್ ಸಿಗದ ಕಾರಣ ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ದು, ಕಣದಿಂದ ಹಿಂದೆ ಸರಿಯುವಂತೆ ಯಾರೂ ಒತ್ತಡ ಹೇರಿಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಎರಡನೇ ಸ್ಥಾನಕ್ಕೆ ಲಖನ್ ಜಾರಕಿಹೊಳಿಗೆ ಟಿಕೆಟ್ ನೀಡಬೇಕೆಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಲೋಕಸಭೆ ಸದಸ್ಯೆ ಮಂಗಳಾ ಅಂಗಡಿ ಹಾಗೂ ಗ್ರಾಮಾಂತರ ಘಟಕದ ಅಧ್ಯಕ್ಷ ಸಂಜಯ್ ಪಾಟೀಲ್ ಮತ್ತು ನಾನು ವರಿಷ್ಠರಿಗೆ ಮನವಿ ಮಾಡಿದ್ದೆವು. ರಮೇಶ ಜಾರಕಿಹೊಳಿ ಅವರು ಟಿಕೆಟ್ ಕೇಳಿರಲಿಲ್ಲ ಎಂದು ತಿಳಿಸಿದ್ದಾರೆ.
ಪಕ್ಷ ಒಬ್ಬರಿಗೆ ಮಾತ್ರ ಟಿಕೆಟ್ ನೀಡಿದ್ದರಿಂದ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಅವರು ಕಣದಿಂದ ಹಿಂದೆ ಸರಿಯಲು ವರಿಷ್ಠರು ಒತ್ತಡ ಹೇರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಥಮ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿಗೆ ನೀಡಬೇಕು. ಎರಡನೇ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್ ಅಭ್ಯರ್ಥಿಗೆ ನೀಡಬೇಡಿ ಎಂದು ಪ್ರಚಾರ ಮಾಡುತ್ತಿದ್ದೇವೆ ಎಂದು ಹೇಳಿದ ಬಾಲಚಂದ್ರ ಜಾರಕಿಹೊಳಿ ಈ ಮೂಲಕ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರನ್ನು ಬೆಂಬಲಿಸುವಂತೆ ಪರೋಕ್ಷವಾಗಿ ಮನವಿ ಮಾಡಿದ್ದಾರೆ.