ಬಿಜೆಪಿಯವರಿಗೆ ಅಧಿಕಾರದ ದಾಹ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಮಂತ್ರಾಲಯದಲ್ಲಿ ಮಾತನಾಡಿದ ಅವರು, ನಮಗೆ ಅಧಿಕಾರದ ದಾಹ ಇದೆ. ನಾವೇನು ಸನ್ಯಾಸಿಗಳಲ್ಲ ಎಂದು ತಿಳಿಸಿದ್ದಾರೆ.
ನಾನು ಮುಖ್ಯಮಂತ್ರಿ, ನಾನು ಮುಖ್ಯಮಂತ್ರಿ ಎಂದು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಡಿದಾಡುತ್ತಾರೆ. ಅಧಿಕಾರದಾಹ ಇರುವುದು ಅವರಿಗೆ ಎಂದು ಟೀಕಿಸಿದ ಈಶ್ವರಪ್ಪ, ಸಿಎಂ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರವೂ ರಾಜ್ಯದಲ್ಲಿ ಬಿಜೆಪಿಯನ್ನು ಸಂಘಟಿಸಲು ಓಡಾಡುತ್ತಿದ್ದಾರೆ. ರಾಜ್ಯದಲ್ಲಿ ತಿರುಗಾಡಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಕೆಲಸ ಮಾಡುತ್ತಿದ್ದಾರೆ. ಈ ರೀತಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮಾಡಲಿ ನೋಡೋಣ. ಚುನಾವಣೆಗೆ ನಿಲ್ಲುವುದಿಲ್ಲ. ಕಾಂಗ್ರೆಸ್ ಬೆಳೆಸುತ್ತೇವೆ ಎಂದು ಅವರು ಹೇಳಲಿ ಎಂದು ಸವಾಲ್ ಹಾಕಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾನು ಪ್ರಸ್ತಾಪ ಮಾಡಿಲ್ಲ. ಮುರುಗೇಶ್ ನಿರಾಣಿ ಭವಿಷ್ಯದಲ್ಲಿ ಮುಖ್ಯಮಂತ್ರಿ ಆಗಬಹುದು ಎಂದು ಹೇಳಿದ್ದೇನೆ ಅಷ್ಟೇ ಎಂದು ತಿಳಿಸಿದ್ದಾರೆ.