ನವದೆಹಲಿ: ಶನಿವಾರ ಸಂಜೆ ಈಶಾನ್ಯ ರಾಜ್ಯ ನಾಗಾಲ್ಯಾಂಡ್‌ನ ಸೋನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ನಂತರ ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮುಂದುವರೆಸಲಾಗಿದೆ. ಮೋನ್ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಕೆಲವು ಯುವಕರ ಮೇಲೆ ಉಗ್ರಗಾಮಿಗಳೆಂದು ಭಾವಿಸಿದ ಭದ್ರತಾ ಪಡೆಗಳು ಗುಂಡು ಹಾರಿಸಿದ್ದಾರೆ. ನಂತರ ನಾಗಾಲ್ಯಾಂಡ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಿಟ್ಟಿಗೆದ್ದ ಗ್ರಾಮಸ್ಥರು ಭದ್ರತಾ ಪಡೆಗಳ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಭದ್ರತಾ ಪಡೆಗಳು ಇಲ್ಲಿ ಉಗ್ರಗಾಮಿಗಳು ಎಂಬ ಶಂಕೆಯ ಮೇಲೆ ಗುಂಡು ಹಾರಿಸಿ 11 ನಾಗರಿಕರನ್ನು ಕೊಂದಿದ್ದಾರೆ ಎಂದು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ದೃಢಪಡಿಸಿದ್ದು, ಘಟನೆಯನ್ನು ಖಂಡಿಸಿದ್ದಾರೆ. ಈ ಪ್ರದೇಶದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ ಅವರು, ಎಸ್‌ಐಟಿಯಿಂದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಗಾಲ್ಯಾಂಡ್‌ನ ಓಟಿಂಗ್‌ನಲ್ಲಿ ನಡೆದ ಅಹಿತಕರ ಘಟನೆಯಿಂದ ದುಃಖವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಎಸ್‌ಐಟಿಯು ಸಮಗ್ರವಾಗಿ ನಡೆಸುತ್ತದೆ. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಹೇಳಿದ್ದಾರೆ.