ಬೆಂಗಳೂರು: ಕೋವಿಡ್ ಹೊಸ ರೂಪಾಂತರಿ ಒಮಿಕ್ರಾನ್ ಪತ್ತೆ ಬೆನ್ನಲ್ಲೇ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳು ಮತ್ತೆ ಬಂದ್ ಆಗುವ ಸಾಧ್ಯತೆ ದಟ್ಟವಾಗಿದೆ.
ಕೆಲ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಕೆಲ ಶಾಲೆಗಳಲ್ಲಿ ಕೋವಿಡ್ ಕೇಸ್ ಹೆಚ್ಚಳ ಆತಂಕ ತಂದಿದೆ. 1-10ನೇ ತರಗತಿವರೆಗಿನ ಶಾಲೆಗಳಲ್ಲಿ ಸೋಂಕು ಪತ್ತೆಯಾಗಿಲ್ಲ. ವಸತಿ, ನವೋದಯ ಶಾಲೆಗಳಲ್ಲಿ ಸೋಂಕು ಪತ್ತೆಯಾಗಿದೆ. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಇಬ್ಬರು ಶಿಕ್ಷಕರಿಗೆ ಸೋಂಕು ಬಂದಿದೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಚಿಕಿತ್ಸೆ ನಿಡಲಾಗುತ್ತಿದೆ. ಕೋವಿಡ್ ಕೇಸ್ ಹೆಚ್ಚಳವಾದರೆ ಶಾಲೆಗಳನ್ನು ಬಂದ್ ಮಾಡಲು ನಾವು ಸಿದ್ಧರಿದ್ದೇವೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಕೋವಿಡ್ ಬಗ್ಗೆ ತಜ್ಞರಿಂದ ಪ್ರತಿದಿನ ಮಾಹಿತಿ ಪಡೆಯುತ್ತಿದ್ದೇನೆ. ಸಧ್ಯಕ್ಕೆ ಆತಂಕ ಬೇಡ ಎಂದು ಹೇಳುತ್ತಿದ್ದಾರೆ ಎಂದರು.
ಫೆಬ್ರವರಿಯಲ್ಲಿ ಕೇಸ್ ಹೆಚ್ಚಬಹುದು ಅಷ್ಟರಲ್ಲಿ ಮಕ್ಕಳಿಗೂ ಲಸಿಕೆ ಬರುವ ನಿರೀಕ್ಷೆ ಇದೆ. ಪರೀಕ್ಷೆಗಳಲ್ಲೂ ದೈಹಿಕ ಅಂತರ ಪಾಲನೆ ಮಾಡಲಾಗುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ ಕೋವಿಡ್ ತಡೆಗೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.