ಚಿಕ್ಕಮಗಳೂರು: ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಆತಂಕಕ್ಕೀಡಾಗಿದ್ದಾರೆ. ಒಂದೇ ಶಾಲೆಯ 35 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ಶಾಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರಿನ ನರಸಿಂಹರಾಜಪುರ ತಾಲೂಕಿನ ಶಾಲೆಯಲ್ಲಿ 35 ವಿದ್ಯಾರ್ಥಿಗಳಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಶಾಲೆಗಳಲ್ಲಿ ಕೋವಿಡ್ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ 94ಕ್ಕೆ ಏರಿಕೆಯಾಗಿದೆ.
ಈಗಾಗಲೇ ಚಿಕ್ಕಮಗಳೂರು ಜಿಲ್ಲೆಯ ಜವಾಹರಲಾಲ್ ನವೋದಯ ವಸತಿ ಶಾಲೆಯ ಕೆಲ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷರನ್ನು ಕ್ವಾರಂಟೈನ್ ಮಾಡಲಾಗಿದೆ.
ಒಟ್ಟಾರೆ ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಆತಂಕ ಹೆಚ್ಚುತ್ತಿದ್ದು, ಮತ್ತೆ ಶಾಲೆಗಳನ್ನು ಬಂದ್ ಮಾಡಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ. ಇದು ಶಿಕ್ಷಣ ಇಲಾಖೆಯ ತಲೆನೋವಿಗೆ ಕಾರಣವಾಗಿದೆ.